ಬೆಂಗಳೂರು, ಜೂನ್ 4: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಆರು ಮಹತ್ವದ ಯೋಜನೆಗಳನ್ನು ಘೋಷಿಸಿ ಗಮನ ಸೆಳೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದೀಗ ರಾಜ್ಯದ ಜನತೆಗೆ ಮತ್ತೊಂದು ಮಹತ್ವದ ಸಿಹಿಸುದ್ದಿ ನೀಡಿದ್ದಾರೆ.
ರಾಜ್ಯದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಪರಿಣಾಮಕಾರಿ ನಿರ್ವಹಣೆಗಾಗಿ ಹೊಸ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಈ ಸಚಿವಾಲಯದ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ ಮುಖ್ಯಮಂತ್ರಿ, ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಹಾಗೂ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಬೇಕು ಎಂದು ನಿರ್ದೇಶನ ನೀಡಿದರು.
ಇದೇ ವೇಳೆ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಗುಣಮಟ್ಟದ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಶಿಕ್ಷಣಕ್ಕಾಗಿ ಬೆಂಗಳೂರಿಗೆ ವಲಸೆ ಬರುವ ಪರಿಸ್ಥಿತಿಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಯಾವುದೇ ಒತ್ತಡಕ್ಕೆ ಮಣಿಯದೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಇತ್ತೀಚೆಗೆ ಘೋಷಿಸಲಾದ ಜನಪರ ಯೋಜನೆಗಳ ಅನುಷ್ಠಾನಕ್ಕೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ 6 ಪ್ರಮುಖ ನಿರ್ಣಯಗಳು:
- ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
- ಸರ್ಕಾರಿ ಹುದ್ದೆಗಳ ಭರ್ತಿ ಹಾಗೂ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ
- 10 ಸಾವಿರ ಯುವಕರ ಸಂಘಗಳ ಸ್ಥಾಪನೆ
- ಒಸಿ ಮತ್ತು ಸಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
- ರಾಜ್ಯಾದ್ಯಂತ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ
- ಬೆಂಗಳೂರು ನಗರದ ರಸ್ತೆ ಅಭಿವೃದ್ಧಿ ಹಾಗೂ ಡಾಮರೀಕರಣ ಕಾಮಗಾರಿಗಳಿಗೆ ₹2,000 ಕೋಟಿ ಅನುದಾನ
ಈ ನಿರ್ಧಾರಗಳು ರಾಜ್ಯದ ಅಭಿವೃದ್ಧಿ ಹಾಗೂ ಜನಸೇವೆಗೆ ಹೊಸ ದಿಕ್ಕು ನೀಡಲಿವೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.
