ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹೈಕೋರ್ಟ್ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಸಾಹುಕಾರ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಮುಂದಿನ ಏಳು ದಿನಗಳೊಳಗೆ ಅವರನ್ನು ಕೆಪಿಎಸ್ಸಿ ಅಧ್ಯಕ್ಷ ಹುದ್ದೆಗೆ ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರಾಜ್ಯಪಾಲರ ಆದೇಶಕ್ಕೆ ಹೈಕೋರ್ಟ್ ಬ್ರೇಕ್

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಇಂದು, ಆಗಸ್ಟ್ 18ರಂದು ಅಂತಿಮ ಆದೇಶ ಪ್ರಕಟಿಸಿದೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಜುಲೈ 10ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಅಮಾನತು ಆದೇಶವನ್ನು ರಾಜ್ಯ ಸಚಿವ ಸಂಪುಟದ ಸೂಕ್ತ ಸಲಹೆ ಅಥವಾ ಶಿಫಾರಸಿನ ಆಧಾರದ ಮೇಲೆ ಕೈಗೊಂಡಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಪುತ್ರಿಯ ನೇಮಕಾತಿ ವಿಚಾರದಲ್ಲಿ ಖಡಕ್ ಸೂಚನೆ

ಸಾಹುಕಾರ್ ಅವರನ್ನು ಮತ್ತೆ ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಿಸಲು ಆದೇಶಿಸಿರುವ ನ್ಯಾಯಾಲಯ, ಪುತ್ರಿಯ ನೇಮಕಾತಿಗೆ ಸಂಬಂಧಿಸಿದ ಯಾವುದೇ ನಿರ್ಧಾರಗಳಲ್ಲಿ ಅವರು ಭಾಗವಹಿಸಬಾರದು ಹಾಗೂ ಪ್ರಕ್ರಿಯೆಯ ಮೇಲೆ ಯಾವುದೇ ರೀತಿಯ ಪ್ರಭಾವ ಬೀರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಮುಂದಿನ ಕಾನೂನು ಕ್ರಮಕ್ಕೆ ಅವಕಾಶ

ಹೈಕೋರ್ಟ್ ಆದೇಶವು ರಾಜ್ಯಪಾಲರ ಅಮಾನತು ಆದೇಶದ ಸಾಂವಿಧಾನಿಕ ಸಿಂಧುತ್ವಕ್ಕೆ ಮಾತ್ರ ಸಂಬಂಧಿಸಿದೆ ಎಂದು ಪೀಠ ಸ್ಪಷ್ಟಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬದ್ಧವಾಗಿ ಮುಂದಿನ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ತಿಳಿಸಿದೆ.

ಒಟ್ಟಿನಲ್ಲಿ, ರಾಜ್ಯಪಾಲರ ಅಮಾನತು ಆದೇಶ ರದ್ದುಪಡಿಸಿರುವ ಹೈಕೋರ್ಟ್, 7 ದಿನಗಳಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ.

Share.
Leave A Reply

Exit mobile version