ಬೆಂಗಳೂರು: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಕಳೆದ 2024ರ ಜನವರಿ 1ರಂದು ಪ್ರತಾಪ್ ಸಿಂಹ ವಿರುದ್ಧ ಪ್ರದೀಪ್ ಈಶ್ವರ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಅವರು ಶಾಸಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ (ACJM) ಕೋರ್ಟ್, ವಿಚಾರಣೆಗೆ ಖುದ್ದು ಹಾಜರಾಗುವಂತೆ ಪ್ರದೀಪ್ ಈಶ್ವರ್‌ಗೆ ಸೂಚನೆ ನೀಡಿತ್ತು.
ಆದರೆ, ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಕೋರ್ಟ್ ವಿಚಾರಣೆಗೆ ಪ್ರದೀಪ್ ಈಶ್ವರ್ ಗೈರಾಗಿದ್ದರು. ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಇದೀಗ 42ನೇ ಎಸಿಜೆಎಂ ಕೋರ್ಟ್ ಶಾಸಕರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಆದೇಶವನ್ನು ಹೊರಡಿಸಿ, ಕಠಿಣ ಕ್ರಮ ಕೈಗೊಂಡಿದೆ.
- ಪ್ರಕರಣದ ಹಿನ್ನೆಲೆ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಭಾಷಣಗಳಲ್ಲಿ ಮೈಸೂರು-ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಕೆಲವು ವೈಯಕ್ತಿಕ ಹಾಗೂ ವಿವಾದಾತ್ಮಕ ಟೀಕೆಗಳನ್ನು ಮಾಡಿದ್ದರು. ಇದು ತಮ್ಮ ಘನತೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಪ್ರತಾಪ್ ಸಿಂಹ ಅವರು ಈ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
